
ಬೆಂಗಳೂರು, ನವೆಂಬರ್ 11: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ನಾಳೆ ಮನೆ ಮನೆ ಪ್ರಚಾರ, ಬುಧವಾರ 3 ಕ್ಷೇತ್ರಗಳಲ್ಲಿ ಮತದಾನ, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ 3 ಪಕ್ಷಗಳ ನಾಯಕರು ಇಂದು ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರ ಪ್ರಚಾರ ನಡೆಸಿ ಮತದಾರರನ್ನು ಸೆಳೆಯಲು ಯತ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಡೆಗಳಿಗೆಯ ಮತ ಭೇಟೆ ನಡೆಸಿದರು.
ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ.ಇನ್ನು, ಸಂಡೂರಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.