
ಬೆಂಗಳೂರು, ಜನವರಿ 08: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ 21 ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಸಿದ್ಧತೆ ಕುರಿತು ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ.
ಜನವರಿ 15 ಹಾಗೂ 16 ರಂದು ಸಚಿವರು, ಶಾಸಕರು, ಮುಖಂಡರು, ಮಾಜಿ ಶಾಸಕರು, ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.