
ಬೆಂಗಳೂರು, ನವೆಂಬರ್ 12 : ನಾಗರೀಕ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ರಾಜ್ಯ ಸರ್ಕಾರ ಮಂಗಳವಾರ ಸ್ಪಷ್ಟನೆ ನೀಡಿದೆ.
ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.ಮೀಸಲಾತಿ ನೀಡುವಂತೆ ಮುಸ್ಲಿಂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (2ನೇ ತಿದ್ದುಪಡಿ) ಕಾಯ್ದೆಗೆ ತಿದ್ದುಪಡಿ ತರಲು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಗೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿತ್ತು.
ಈ ಕುರಿತಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ವಿಚಾರ ವಿವಾದಕ್ಕೆ ದಾರಿ ಮಾಡಿಕೊಟ್ಟಿತ್ತು.ಇದೀಗ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದ್ದು, ಮೀಸಲಾತಿ ಬೇಡಿಕೆ ಇರುವುದು ನಿಜ, ಆದರೆ ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂಬ ವರದಿ ಸುಳ್ಳು ಎಂದು ಹೇಳಿದೆ.
ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.